
ತುಮಕೂರು: ಕಲುಷಿತ ನೀರು ಸೇವನೆಯಿಂದ 98 ಜನರು ಅಸ್ವಸ್ಥರಾಗಿರುವ ಘಟನೆ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. 39 ಮಂದಿ ತಾಲೂಕು ಮತ್ತು ಜಿಲ್ಲಾಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಸ್ಥಳದಲ್ಲೇ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.
ಸಚಿವರ ಸೂಚನೆಯ ಮೇರೆಗೆ ಚಿನ್ನೇನಹಳ್ಳಿ ಗ್ರಾಮದ ಶಾಲೆಯಲ್ಲಿಯೇ 6 ಹಾಸಿಗೆಗಳ ತುರ್ತು ಚಿಕಿತ್ಸಾ ಕೇಂದ್ರವನ್ನು ತೆರೆಯಲಾಗಿದ್ದು, ವೈದ್ಯಕೀಯ ಸಿಬ್ಬಂದಿ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.
ಚಿನ್ನೇನಹಳ್ಳಿ ಗ್ರಾಮದಲ್ಲಿ ಇರುವ ಕೊಳವೆ ಬಾವಿಗಳು ಮತ್ತು ನೀರಿನ ಜಲಸಂಗ್ರಹಗಳಿಂದ ಸರಬರಾಜು ಮಾಡುತ್ತಿದ್ದ ನೀರನ್ನು ಈಗಾಗಲೇ ಸ್ಥಗಿತಗೊಳಿಸಲಾಗಿದ್ದು, ಪ್ರಸ್ತುತ 2 ಟ್ಯಾಂಕರ್‌ಗಳ ಮೂಲಕ ಗ್ರಾಮಕ್ಕೆ ನೀರು ಸರಬರಾಜು ಮಾಡಲಾಗುತ್ತಿದೆ. ಗ್ರಾಮದಲ್ಲಿರುವ ಎಲ್ಲಾ ನೀರಿನ ಮೂಲಗಳ ಮಾದರಿಗಳನ್ನು ಸಂಗ್ರಹಿಸಿ, ಪ್ರಾಥಮಿಕ ಹಂತದಲ್ಲಿ ಪರೀಕ್ಷಿಸಲಾಗಿದ್ದು, ಹೆಚ್ಚಿನ ಪರೀಕ್ಷೆಗಾಗಿ ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ.
ಘಟನೆ ಬಗ್ಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಸಾರ್ವಜನಿಕರ ಆರೋಗ್ಯದ ಬಗ್ಗೆ ತೀವ್ರ ನಿಗಾ ಇರಿಸಲು ಹಾಗೂ ಪರ್ಯಾಯ ಶುದ್ಧ ನೀರಿನ ವ್ಯವಸ್ಥೆ ಮಾಡಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಪ್ರಕರಣ ಸಂಬಂಧ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮಧುಗಿರಿ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರನ್ನು ಅಮಾನತುಗೊಳಿಸಲಾಗಿದೆ. ಅಲ್ಲದೆ ಚಿನ್ನೇನಹಳ್ಳಿ ಗ್ರಾಮ ಪಂಚಾಯತಿಯ ಕಾರ್ಯದರ್ಶಿ ಹಾಗೂ ನೀರು ಸರಬರಾಜು ಸಿಬ್ಬಂದಿಯನ್ನು ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ ಎಂದು ಗ್ರಾಮೀಣ ನೀರು ಸರಬರಾಜು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
Poll (Public Option)

Post a comment
Log in to write reviews