
ಬೆಂಗಳೂರು: ಅಕ್ಟೋಬರ್ 2 ರಂದು ರಾಜ್ಯಾದ್ಯಂತ `ಗಾಂಧಿ ನಡಿಗೆ ಹಾಗೂ `ಸ್ವಚ್ಛತೆಯ ಪ್ರತಿಜ್ಞಾ ಸ್ವೀಕಾರ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು. ಈ ಕುರಿತು ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿಯವರು ಬೆಳಗಾವಿಯಲ್ಲಿ ಸ್ವಾತಂತ್ರ‍್ಯ ಸಂಗ್ರಾಮದ ನೇತೃತ್ವ ವಹಿಸಿಕೊಂಡು 100 ವರ್ಷವಾಗಿರುವ ಹಿನ್ನೆಲೆಯಲ್ಲಿ ಒಂದು ವರ್ಷಗಳ ಕಾಲ ವಿಭಿನ್ನ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಕಾರ್ಯಕ್ರಮದ ಮೊದಲ ಭಾಗವಾಗಿ ಅ.2 ಗಾಂಧಿ ಜಯಂತಿಯಂದು 1 ಕಿ.ಮೀ. ‘ಗಾಂಧಿ ನಡಿಗೆ’ಮತ್ತು ‘ಸ್ವಚ್ಛತಾ ಪ್ರತಿಜ್ಞಾ ಸ್ವೀಕಾರ’ ಅಭಿಯಾನ ಹಮ್ಮಿಕೊಳ್ಳಲಾಗುವುದು. ರಾಜ್ಯಾದ್ಯಂತ ಜಿಲ್ಲಾ, ತಾಲೂಕು ಕೇಂದ್ರ ಹಾಗೂ ಪಾಲಿಕೆ ಮಟ್ಟದಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದರು.
ಬೆಂಗಳೂರಿನಲ್ಲಿ ಬುಧವಾರ ಬೆಳಗ್ಗೆ 9 ಗಂಟೆಗೆ ಗಾಂಧಿ ಭವನದಿಂದ ವಿಧಾನಸೌಧದ ಗಾಂಧಿ ಪ್ರತಿಮೆವರೆಗೂ ನಡಿಗೆ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಪಕ್ಷಾತೀತವಾಗಿ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು ಎಂದು ಹೇಳಿದ ಅವರು, ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಇಬ್ಬರ ಜನ್ಮದಿನವೂ ಒಂದೇ ದಿನ ಆಗಿರುವ ಕಾರಣ ಇಬ್ಬರ ಪ್ರತಿಮೆಗೂ ಮಾಲಾರ್ಪಣೆ ಮಾಡಲಾಗುವುದು. ನಂತರ ನಡಿಗೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಹಾಗೂ ಬೆಂಗಳೂರಿನ 500 ಶಾಲಾ, ಕಾಲೇಜು ಮಕ್ಕಳಿಗೆ ಜೂಮ್ ಮೂಲಕ ಪ್ರತಿಜ್ಞಾ ವಿಧಿ ಬೋಧನೆ ಮಾಡಲಾಗುವುದು. ಇದು ಸರ್ಕಾರದ ಕಾರ್ಯಕ್ರಮ, ಗಾಂಧಿ ಅವರ ಆದರ್ಶವನ್ನು ಯುವ ಪೀಳಿಗೆಗೆ ತಲುಪಿಸಲು ಈ ಕಾರ್ಯಕ್ರಮ ರೂಪಿಸಿದೆ ಎಂದರು.
Poll (Public Option)

Post a comment
Log in to write reviews