
ಬೆಂಗಳೂರು: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿದ್ದರು. ಆದರೆ ಈಗ ಕಾಂಗ್ರೆಸ್ ಸೇರಿದ್ದಾರೆ. ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರುಗಳನ್ನು ಇಂದು ಬೆಳಗ್ಗೆ ಭೇಟಿ ಮಾಡಿ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ. ಈ ಮಹತ್ವದ ಬೆಳವಣಿಗೆಯಿಂದಾಗಿ ದಳಪತಿಗಳಿಗೆ ಬಿಗ್ ಶಾಕ್ ಆಗಿದೆ.
ಯಾಕೆಂದರೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಂದ ತೆರವಾಗಿದ್ದ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಆಗಿದೆ. ನಾಮ ಪತ್ರ ಸಲ್ಲಿಸೋಕೆ ಇನ್ನು ಎರಡು ದಿನ ಮಾತ್ರ ಬಾಕಿ ಇದೆ. ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯು ನವೆಂಬರ್ 13 ರಂದು ಮತದಾನ ನಡೆಯಲಿದ್ದು, 23 ರಂದು ಫಲಿತಾಂಶ ಪ್ರಕಟವಾಗಲಿದೆ. ಹೀಗಿರುವಾಗ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರಿರೋದು ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ದೊಡ್ಡ ಪೆಟ್ಟು ಬಿದ್ದಂತಾಗಿದೆ.
ಯೋಗೇಶ್ವರ್ ಕಾಂಗ್ರೆಸ್ ಸೇರಿರೋದ್ರಿಂದ ದಳಪತಿಗಳಲ್ಲಿ ತಳಮಳ ಶುರುವಾಗಿದೆ. ಚನ್ನಪಟ್ಟಣ ಅಖಾಡದಲ್ಲಿ ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ಅಭ್ಯರ್ಥಿಯಾಗೋ ಸಾಧ್ಯತೆ ದಟ್ಟವಾಗಿದೆ. ಒಂದು ವೇಳೆ ಯೋಗೇಶ್ವರ್ ಅವರೇ ಕಣಕ್ಕಿಳಿದರೆ, ಜೆಡಿಎಸ್ ಪ್ರಬಲ ಅಭ್ಯರ್ಥಿಯನ್ನು ನಿಲ್ಲಿಸಬೇಕಾಗಿದೆ. ಚುನಾವಣೆಯಲ್ಲಿ ಸ್ಪರ್ಧಿಸಲು ನಿಖಿಲ್ ಕುಮಾರಸ್ವಾಮಿ ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗುತ್ತಿದೆ. ಈ ನಡುವೆ ಮತ್ತೆ ಅನಿತಾ ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ.ಎನ್.ಮಂಜುನಾಥ್ ಅವರ ಪತ್ನಿ ಅನಸೂಯ ಹೆಸರು ಕೂಡ ಕೇಳಿ ಬರುತ್ತಿದೆ. ಕಾಂಗ್ರೆಸ್ ಹಾಗೂ ಸಿಪಿ ಯೋಗೇಶ್ವರ್ ವಿರುದ್ಧ ಸೇಡು ತೀರಿಸಿಕೊಳ್ಳಲು ಜೆಡಿಎಸ್ ಬಲಿಷ್ಠ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲೇಬೇಕಾದ ಅನಿವಾರ್ಯತೆ ಇದೆ.
Poll (Public Option)

Post a comment
Log in to write reviews