
ಬೆಂಗಳೂರು: ಜನವಸತಿ ಪ್ರದೇಶಗಳಲ್ಲಿ ಕುಡಿಯುವ ನೀರು ಕಲುಷಿತಗೊಂಡರೆ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ರಾಜ್ಯದ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಎಲ್ಲಾ ಕಾರ್ಯಪಾಲಕ ಅಭಿಯಂತರರಿಗೆ ಈ ಸಂಬಂಧ ಸಚಿವರು ಪತ್ರ ಬರೆದಿದ್ದಾರೆ. ಗ್ರಾಮೀಣ ಜನವಸತಿ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವುದು ಇಲಾಖೆಯ ಮತ್ತು ಆಯಾ ಗ್ರಾಮ ಪಂಚಾಯತಿಯ ಜವಾಬ್ದಾರಿಯಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ರಾಜ್ಯದ ಕೆಲವು ಜಿಲ್ಲೆಗಳ ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ಕಲುಷಿತ ನೀರು ಸೇವನೆಯಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದ್ದು ಪ್ರಾಣಹಾನಿಗಳು ಕೂಡಾ ಸಂಭವಿಸಿರುತ್ತವೆ. ಇಂತಹ ಪ್ರಕರಣಗಳನ್ನು ತಡೆಯುವ ನಿಟ್ಟಿನಲ್ಲಿ ಕೂಡಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲಾ ಸಂಬಂಧಪಟ್ಟ ಅಧಿಕಾರಿಗಳಿಗೆ ಇಲಾಖೆಯಿಂದ ಕಾಲಕಾಲಕ್ಕೆ ನಿರ್ದೇಶನಗಳನ್ನು ನೀಡಲಾಗಿದೆ. ಹೀಗಿದ್ದರೂ ಕಲುಷಿತ ನೀರು ಸೇವನೆಯಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಪುನರಾವರ್ತನೆಯಾಗುತ್ತಿದೆ. ಈ ರೀತಿ ಆಗದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ನೀರಿನ ತೊಟ್ಟಿ, ಜಲಾಗಾರಗಳು ಸುಸ್ಥಿತಿಯಲ್ಲಿರಲಿ
ನೀರಿನ ಶೇಖರಣೆ ಮಾಡುವ ಕಿರು ನೀರು ಸರಬರಾಜು ಮಾಡುವ ನೀರಿನ ತೊಟ್ಟಿಗಳು ಹಾಗೂ ಜಲಾಗಾರಗಳನ್ನು ಕಾಲಕಾಲಕ್ಕೆ ಸರಿಯಾಗಿ ಸ್ವಚ್ಚಗೊಳಿಸಬೇಕು. ಕ್ಲೋರಿನೇಷನ್ ಕೈಗೊಳ್ಳುವುದು ಮತ್ತು ನೀರಿನ ಮೂಲಗಳಾದ ಕೊಳವೆ ಬಾವಿಗಳ ಸುತ್ತಮುತ್ತ ನಿಲ್ಲುವ ಕೊಳಚೆ ನೀರನ್ನು ಸ್ವಚ್ಛಗೊಳಿಸಿ ನೀರಿನ ಮೂಲಗಳಿಗೆ ಕಲುಷಿತ ನೀರು ಸೇರದಂತೆ ಕ್ರಮ ಕೈಗೊಳ್ಳಬೇಕು. ನೀರು ಸರಬರಾಜು ವ್ಯವಸ್ಥೆಯಡಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಕಾಲ ಕಾಲಕ್ಕೆ ಮೇಲ್ವಿಚಾರಣೆ ನಡೆಸಬೇಕು. ಅಧಿಕಾರಿಗಳ ನಿರ್ಲಕ್ಷತನದಿಂದ ಪ್ರಕರಣಗಳು ಪುನಾರಾವರ್ತನೆ ಆದಲ್ಲಿ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಸಚಿವರು ಪತ್ರದಲ್ಲಿ ತಿಳಿಸಿದ್ದಾರೆ.
Poll (Public Option)

Post a comment
Log in to write reviews