ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಶಾಸಕ ವೈ.ಭರತ್ ಶೆಟ್ಟಿ ಮೇಲೆ FIR ದಾಖಲು

ಮಂಗಳೂರು: ಕಾಂಗ್ರೆಸ್ ಸಂಸದ, ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಆರೋಪಕ್ಕೆ ಬಿಜೆಪಿ ಶಾಸಕ ಡಾ.ವೈ.ಭರತ್ ಶೆಟ್ಟಿ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.
ಪಾಲಿಕೆ ಸದಸ್ಯ ಕಾಂಗ್ರೆಸ್‌ನ ಅನಿಲ್ ಕುಮಾರ್ ನೀಡಿದ್ದ ದೂರಿನ ಆಧಾರದಲ್ಲಿ ಎಫ್ಐಆರ್ ದಾಖಲಿಸಿ, BNS 351(3), 353 ಸೆಕ್ಷನ್ ಅಡಿ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಮಧ್ಯೆ, ಭರತ್ ಶೆಟ್ಟಿ ಹೇಳಿಕೆ ಖಂಡಿಸಿ ಮಂಗಳೂರು ಪಾಲಿಕೆ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಪ್ರತಿಭಟನೆ ಮುಗಿದ ಬೆನ್ನಲ್ಲೇ ಏಕಾಏಕಿ ರಸ್ತೆಗೆ ನುಗ್ಗಿದ ಕಾರ್ಯಕರ್ತರು ರಸ್ತೆಗಳನ್ನು ತಡೆ ಮಾಡಿದ್ದಾರೆ. ಇದರಿಂದ ಲಾಲ್ ಭಾಗ್ ಸರ್ಕಲ್ ಬಳಿ ಟ್ರಾಫಿಕ್ ಜಾಂ ಉಂಟಾಯಿತು. ಬಳಿಕ ರಸ್ತೆ ತಡೆ ನಡೆಸಿದ ನಾಯಕರು ಹಾಗೂ ಕಾರ್ಯಕರ್ತರನ್ನು ಪೊಲೀಸರು ಪಕ್ಕಕ್ಕೆ ಪಡೆದರು.
ಭರತ್ ಶೆಟ್ಟಿ ಹೇಳಿಕೆ:
ಮಂಗಳೂರಿನ ಕಾವೂರಿನಲ್ಲಿ ಸೋಮವಾರ ನಡೆದಿದ್ದ ಬಿಜೆಪಿ ಪ್ರತಿಭಟನೆಯಲ್ಲಿ ಮಾತನಾಡಿದ ಭರತ್ ಶೆಟ್ಟಿ, ರಾಹುಲ್ ಗಾಂಧಿಗೆ ಪಾರ್ಲಿಮೆಂಟ್ ಒಳಗೆ ಹೋಗಿ ಕೆನ್ನೆಗೆ ಬಾರಿಸಬೇಕಿತ್ತು ಅನಿಸುತ್ತಿದೆ ಎಂದಿದ್ದರು. ರಾಹುಲ್ ಗಾಂಧಿ ಶಿವನ ಫೋಟೊ ಹಿಡಿದು ನಿಂತಿದ್ದಕ್ಕೆ, ಈ ಹುಚ್ಚನಿಗೆ ಶಿವ ಮೂರನೇ ಕಣ್ಣು ಬಿಟ್ಟರೆ ಸುಟ್ಟು ಬೂದಿಯಾಗಬಹುದು ಅಂತ ಗೊತ್ತಿಲ್ಲ ಎಂದು ಹೇಳಿದ್ದರು.
ಸಾರ್ವಜನಿಕ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿ ವ್ಯಕ್ತಿಯನ್ನು ನಿಂದಿಸಿದ ಬಗ್ಗೆ ಭರತ್ ಶೆಟ್ಟಿ ವಿರುದ್ಧ ದೂರು ದಾಖಲಾಗಿತ್ತು. ಶಸ್ತ್ರಾಸ್ತ್ರ ಉಪಯೋಗಿಸಿ ಹೋರಾಟ ಮಾಡೋಣ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದೂ ಆರೋಪಿಸಲಾಗಿದೆ. ಶಾಸಕರ ಹೇಳಿಕೆಯನ್ನು ಬೆಂಬಲಿಸಿದ ಶಾಸಕ ವೇದವ್ಯಾಸ್ ಕಾಮತ್, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಕಾರ್ಪೋರೇಟರ್ಗಳ ವಿರುದ್ಧವೂ ದೂರು ದಖಾಲಿಸಲು ದೂರುದಾರರು ಆಗ್ರಹಿಸಿದ್ದಾರೆ.
Poll (Public Option)

Post a comment
Log in to write reviews