ಬೆಂಗಳೂರು: ರಾಜ್ಯದಲ್ಲಿರುವ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಕಂಪನಿಗಳ ಆಡಳಿತಾತ್ಮಕ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ.75 ಮೀಸಲಾತಿ ನಿಗದಿಪಡಿಸುವ ಕರಡು ಮಸೂದೆಗೆ ಸರ್ಕಾರ ತಾತ್ಕಾಲಿಕ ತಡೆ ನೀಡಿದೆ.
ನಿನ್ನೆ ಸಚಿವ ಸಂಪುಟ ಅನುಮೋದನೆ ನೀಡಿದ್ದ ಮಸೂದೆ ಕುರಿತು ಮತ್ತಷ್ಟು ಚರ್ಚೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಕಚೇರಿಯಿಂದ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ.
ಕನ್ನಡಿಗರಿಗೆ ಉದ್ಯೋಗ ಮೀಸಲಾತಿಯ ಕರಡು ಮಸೂದೆ ಜಾರಿಗೆ ತರುವುದಾಗಿ ಘೋಷಿಸಿದ ಬೆನ್ನಲ್ಲೇ ಉದ್ಯಮಿಗಳಾದ ಕಿರಣ್ ಮಜುಂದಾರ್ ಶಾ, ಮೋಹನ್ ದಾಸ್ ರಿಂದ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ ಉದ್ಯಮ ಸಂಘಟನೆಯಾದ ನಾಸ್ಕಾಮ್ ಸಹ ತೀವ್ರ ವಿರೋಧ ವ್ಯಕ್ತಪಡಿಸಿದ್ದು ಈ ರೀತಿಯ ಮಸೂದೆ ಕಳವಳಕಾರಿಯಾದುದು. ಇದು ಉದ್ಯಮದ ಬೆಳವಣಿಗೆಗೆ ಧಕ್ಕೆ ತರುತ್ತದೆ. ರಾಜ್ಯಕ್ಕೆ ಇರುವ ಜಾಗತಿಕ ಬ್ರ್ಯಾಂಡಿಂಗ್ಗೂ ಧಕ್ಕೆ ಆಗುತ್ತದೆ. ಈ ಮಸೂದೆಯಲ್ಲಿರುವ ಕಾನೂನುಗಳ ಬಗ್ಗೆ ನಾಸ್ಕಾಮ್ ಸದಸ್ಯರಿಗೆ ಆತಂಕ ಇದೆ. ಈ ಮಸೂದೆಯನ್ನು ಹಿಂಪಡೆಯಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತೇವೆ ಎಂದು ನಾಸ್ಕಾಮ್ ಹೇಳಿತ್ತು.
ನೆರೆ ರಾಜ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಪುತ್ರ ಈ ವಿಷಯವನ್ನೇ ಪ್ರಸ್ತಾಪಿಸಿ ನಮ್ಮ ರಾಜ್ಯಕ್ಕೆ ಬನ್ನಿ ಎಂದು ಆಹ್ವಾನವನ್ನು ನೀಡಿದ್ದವು. ಸದ್ಯಕ್ಕೆ ಉದ್ಯಮಿಗಳ ಒತ್ತಡಕ್ಕೆ ಮಣಿದಿರುವ ರಾಜ್ಯ ಸರ್ಕಾರ ಮಸೂದಗೆ ತಾತ್ಕಾಲಿಕ ತಡೆಯನ್ನು ನೀಡಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
ರಾಜ್ಯ ಸರ್ಕಾರದ ಮಸೂದೆ ಪ್ರಕಾರ, ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ. 50ರಷ್ಟು ಮತ್ತು ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ. 75ರಷ್ಟು ಸ್ಥಳೀಯರಿಗೆ ಮೀಸಲಾತಿಯನ್ನು ಕಡ್ಡಾಯಗೊಳಿಸುತ್ತದೆ. ಸಾಕಷ್ಟು ಅರ್ಹ ಅಭ್ಯರ್ಥಿಗಳು ಇಲ್ಲದೇ ಇದ್ದರೆ ಸರ್ಕಾರದ ಸಹಯೋಗದೊಂದಿಗೆ ಉದ್ಯಮವು ಮೂರು ವರ್ಷಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ತರಬೇತಿ ನೀಡಿ ಅವರನ್ನು ತೊಡಗಿಸಿಕೊಳ್ಳಬೇಕು. ಪ್ರಸ್ತಾವಿತ ಕಾನೂನಿನ ನಿಬಂಧನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಉದ್ಯಮಕ್ಕೆ ಮೂರು ವರ್ಷಗಳ ಕಾಲಾವಕಾಶ ನೀಡಲು ಸರ್ಕಾರ ಯೋಜನೆ ರೂಪಿಸುತ್ತಿದೆ.
Post a comment
Log in to write reviews