
ಕಲಬುರಗಿ: ಆಗಸ್ಟ್ ಕೊನೆಯ ವಾರ ಅಥವಾ ಸೆಪ್ಟೆಂಬರ್ ಮೊದಲ ವಾರದಲ್ಲಿ ಕಲಬುರಗಿಯ ಜಯದೇವ ಹೃದ್ರೋಗ ಆಸ್ಪತ್ರೆ ಲೋಕಾರ್ಪಣೆಗೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಜುಲೈ ತಿಂಗಳಲ್ಲಿ ಆಸ್ಪತ್ರೆ ಲೋಕಾರ್ಪಣೆ ಮಾಡುವ ನಿರ್ಧಾರ ಕೈಗೊಳ್ಳಲಾಗಿತ್ತು. ಆದರೆ ಕಾಮಗಾರಿ ಪೂರ್ಣಗೊಂಡಿರಲಿಲ್ಲ. ಕಾಮಗಾರಿ ಪೂರ್ಣಗೊಳ್ಳಲು ಇನ್ನೂ ಒಂದು ತಿಂಗಳು ಬೇಕಾಗಿದೆ. ಒಂದು ವೇಳೆ ಆಗಸ್ಟ್ ಕೊನೆಯ ವಾರದ ಕಾಮಗಾರಿ ಪೂರ್ಣಗೊಂಡರೇ ಆಗಲೇ ಲೋಕಾರ್ಪಣೆ ಮಾಡುತ್ತೇವೆ. ಇಲ್ಲದೇ ಇದ್ದರೆ ಸೆಪ್ಟೆಂಬರ್ ಮೊದಲ ವಾರದಲ್ಲಿ ಆಸ್ಪತ್ರೆ ಉದ್ಘಾಟನೆ ಮಾಡೋದಾಗಿ ತಿಳಿಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ ಆಶೀರ್ವದಿಸಿದ ಕಲಬುರಗಿ ಲೋಕಸಭಾ ಕ್ಷೇತ್ರದ ಜನರ ಋಣ ತೀರಿಸುವ ನಿಟ್ಟಿನಲ್ಲಿ ಮುಂದಿನ ಮೂರು ತಿಂಗಳಲ್ಲಿ 371 ಹಾಸಿಗೆ ಸಾಮರ್ಥ್ಯದ ಜಯದೇವ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಜನರಿಗೆ ಸೇವೆಗಾಗಿ ಒದಗಿಸಲಾಗುತ್ತಿದೆ ಎಂದು ಹೇಳಿದರು.
ಇದರ ಜೊತೆಗೆ, ಈ ಭಾಗದ ಜನರಿಗೆ ಕೃತಜ್ಞತೆ ಸಲ್ಲಿಸಲು ಮುಂದಿನ ಒಂದು-ಒಂದೂವರೆ ತಿಂಗಳಲ್ಲಿ 150 ಹಾಸಿಗೆ ಸಾಮರ್ಥ್ಯದ ಕ್ಯಾನ್ಸರ್ ಆಸ್ಪತ್ರೆ ಮತ್ತು 200 ಹಾಸಿಗೆ ಸಾಮರ್ಥ್ಯದ ತಾಯಿ-ಮಕ್ಕಳ ಆಸ್ಪತ್ರೆಗೆ ಅಡಿಗಲ್ಲು ನೆರವೇರಿಸಲಾಗುವುದು. ಇದರ ಜೊತೆಗೆ ಮುಂದಿನ ಒಂದು ವಾರದಲ್ಲಿ ಸುಟ್ಟ ಗಾಯಗಳ ವಾರ್ಡ್ ಮತ್ತು 50 ಹಾಸಿಗೆ ಸಾಮರ್ಥ್ಯದ ತುರ್ತು ಚಿಕಿತ್ಸಾ ಕೇಂದ್ರ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಗುವುದು ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವುದರ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಸಚಿವ ಪಾಟೀಲ್, ಮೊದಲು ಅವರಿಗೆ ನರೇಂದ್ರ ಮೋದಿ ಅವರ ಕಚೇರಿ ಎದುರು ಪ್ರತಿಭಟನೆ ನಡೆಸಿ ಪೆಟ್ರೋಲ್-ಡೀಸೆಲ್ ದರ ಇಳಿಕೆಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಲು ಹೇಳಿದ್ದಾರೆ.
Poll (Public Option)

Post a comment
Log in to write reviews