
ಬೆಂಗಳೂರು : ಬಿಜೆಪಿ ಪಾದಯಾತ್ರೆ ಮಾಡುವ ಬಗ್ಗೆ ಅಭ್ಯಂತರವಿಲ್ಲ. ಕೇಂದ್ರ ಸಚಿವ ಹಾಗೂ ಜೆಡಿಎಸ್ ಅಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಈ ಪ್ರಕರಣದಲ್ಲಿ ಏನೂ ಇಲ್ಲ ಎಂದು ಪಾದಯಾತ್ರೆ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮುಡಾ ಹಗರಣದ ಕುರಿತು ಬಿಜೆಪಿ-ಜೆಡಿಎಸ್ ಪ್ರತಿಭಟನೆ ಕುರಿತು ಮಾತನಾಡಿ, ಮಳೆ ಹೆಚ್ಚಾಗಿದೆ , ಜಲಾಶಯಗಳು ತುಂಬಿ ಪ್ರವಾಹ ಬಂದಿದೆ ಅದರ ಕಡೆಗೆ ಗಮನ ನೀಡಬೇಕೆಂದು ಹೇಳಿದರು. ಈಗ ಅದು ಮರೆತುಹೋಯಿತೇ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ ಅವರು, ಅವರ ಸ್ವ ಇಚ್ಛೆಯಿಂದ ಪಾದಯಾತ್ರೆ ಮಾಡುತ್ತಿಲ್ಲ ಎಂದು ಹೇಳಿದರು.
ಮಳೆಯಿಂದ ಮನೆ ಬಿದ್ದಿರುವುದು, ರಸ್ತೆ ಹಾಳಾಗಿರುವುದು, ಸೇತುವೆಗಳು, ವಿದ್ಯುತ್ ಕಂಬಗಳು ಬಿದ್ದಿರುವುದ್ದರ ಬಗ್ಗೆ ವರದಿ ತರಿಸುತ್ತಿರುವುದಾಗಿ ತಿಳಿಸಿದರು. ಮನೆಗಳನ್ನು ಕಟ್ಟಿಕೊಡುವುದು ಹಾಗೂ ಪರಿಹಾರ ಕೊಡುತ್ತೇವೆ ಎಸ್.ಡಿ.ಆರ್. ಎಫ್ ಮಾರ್ಗಸೂಚಿ ಪ್ರಕಾರ ಎಷ್ಟು ಕೊಡಬೇಕೋ ಅಷ್ಟು ಪರಿಹಾರ ನೀಡಿ ಮನೆಯನ್ನೂ ಕಟ್ಟಿಕೊಡಲಾಗುವುದು ಎಂದರು.
ಪ್ರಾಸಿಕ್ಯೂಶನ್ ಗೆ ಅನುಮತಿ ಕೊಟ್ಟಿರುವ ಸಂದರ್ಭದಲ್ಲಿ ಏನು ಬೆಳವಣಿಗಳಾಗಿವೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಿನ್ನೆ ನಡೆದ ಸಚಿವ ಸಂಪುಟ ಸಭೆಗೆ ಕೆಟ್ಟ ಸಾಂಪ್ರದಾಯವಾಗುತ್ತದೆ ಎಂದು ಸಭೆಗೆ ಹೋಗದೇ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಸಚಿವ ಸಂಪುಟ ಸಭೆ ನಡೆಸಲು ನೇಮಿಸಲಾಗಿತ್ತು. ಶೋಕಾಸ್ ನೋಟಿಸ್ ಬಗ್ಗೆ ಸುದೀರ್ಘ ಚರ್ಚೆ ಮಾಡಿ, ನೋಟೀಸು ನೀಡಿರುವುದು ಕಾನೂನು ಬಾಹಿರವಾಗಿದ್ದು, ನೋಟೀಸನ್ನು ಅದನ್ನು ಹಿಂಪಡೆಯಬೇಕೆಂದು ನಿರ್ಧರಿಸಲಾಗಿದೆ ಎಂದರು.
Poll (Public Option)

Post a comment
Log in to write reviews