
ಬೆಂಗಳೂರು: ಕಾನೂನು ಎಲ್ಲರಿಗೂ ಒಂದೇ. ಅದು ನನಗೂ, ದರ್ಶನ್ ಗೂ ಅನ್ವಯಿಸುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಾನೂನನ್ನು ಯಾರೂ ಕೈಗೆತ್ತಿಕೊಳ್ಳಬಾರದು. ಕಾನೂನು ಎಲ್ಲರಿಗೂ ಒಂದೇ. ದರ್ಶನ್ ಈ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದಡಿ ಅಧಿಕಾರಿಗಳು ಕರೆದುಕೊಂಡು ಬಂದಿದ್ದಾರೆ. ಅವರನ್ನೀಗ ಬಂಧಿಸಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ. ತನಿಖೆಯಲ್ಲಿ ಏನು ವಿಚಾರ ಬರಲಿದೆಯೋ ಅದರ ಮೇಲೆ ಪೊಲೀಸರು ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದರು.
ಮೃತರಾದ ರೇಣುಕಾಸ್ವಾಮಿ, ದರ್ಶನ್ ಗೆಳತಿ ಬಗ್ಗೆ ಸೋಷಿಯಲ್ ಮೀಡಿಯಾದಲ್ಲೇನೋ ಪೋಸ್ಟ್ (ಕಾಮೆಂಟ್) ಮಾಡಿದ್ದ. ಅದರ ಬಗ್ಗೆ ಅವರು ದೂರು ಕೊಡಬಹುದಿತ್ತು. ಪೊಲೀಸರು ತಕ್ಷಣ ಕ್ರಮ ತೆಗೆದುಕೊಳ್ಳುತ್ತಿದ್ದರು. ಆದರೆ ಅವರನ್ನು ಕರೆದುಕೊಂಡು ಬಂದು ಹೊಡೆದು ಸಾಯಿಸಿದ್ದಾರೆ ಎಂಬ ಮಾಹಿತಿ ಇದೆ. ಹೀಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಾನೂನು ರೀತಿಯಲ್ಲಿ ಏನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ಪೊಲೀಸರು ತೆಗೆದುಕೊಳ್ಳುತ್ತಾರೆ ಎಂದು ಪರಮೇಶ್ವರ್ ತಿಳಿಸಿದರು.
ಪ್ರಕರಣದಿಂದ ಬಚಾವಾಗಲು ದರ್ಶನ್ ಪ್ರಭಾವಿ ರಾಜಕಾರಣಿಗಳಿಗೆ ಕರೆ ಮಾಡಿರುವ ಆರೋಪಗಳಿಗೆ ಪ್ರತಿಕ್ರಿಯಿಸಿ, ನನಗೆ ತಿಳಿದ ಮಟ್ಟಿಗೆ ಯಾರೂ ಪ್ರಯತ್ನ ಮಾಡಿಲ್ಲ. ನನ್ನ ಹತ್ತಿರವಂತೂ ಯಾರೂ ಬಂದಿಲ್ಲ. ಕಾನೂನು ಪ್ರಕಾರ ಯಾವ ಕ್ರಮ ತೆಗೆದುಕೊಳ್ಳಲು ಅವಕಾಶವಿದೆಯೋ ಅದನ್ನು ತೆಗೆದುಕೊಳ್ಳುತ್ತಾರೆ. ಸರ್ಕಾರ ಈ ವಿಚಾರದಲ್ಲಿ ಮಧ್ಯಪ್ರವೇಶಿಸಲ್ಲ. ಪೊಲೀಸರಿಗೆ ಸರ್ಕಾರ ಫ್ರೀ ಹ್ಯಾಂಡ್ ಕೊಟ್ಟಿದೆ ಎಂದರು.
Poll (Public Option)

Post a comment
Log in to write reviews