ಬೆಂಗಳೂರು: ಮಹಾಲಕ್ಷ್ಮಿಯ ಬರ್ಬರ ಹತ್ಯೆ ಪ್ರಕರಣದಲ್ಲಿ ಶಂಕಿಸಲಾಗಿದ್ದ ಆರೋಪಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮುಕ್ತಿ ರಂಜನ್ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಹಾಲಕ್ಷ್ಮಿ ಕೊಲೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಬೆಂಗಳೂರು ಪೊಲೀಸರು, ಆರೋಪಿಯ ಬಂಧನಕ್ಕೆ ಒಡಿಶಾ ಸೇರಿದಂತೆ ಹಲವು ಕಡೆ ಕಾರ್ಯಾಚರಣೆ ನಡೆಸುತ್ತಿದ್ದು, ಈ ನಡುವೆ ಮುಕ್ತಿ ರಂಜನ್ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಹಾಲಕ್ಷ್ಮಿಯ ಹತ್ಯೆ ಬಳಿಕ ಬೆಂಗಳೂರಿನಿಂದ ಪರಾರಿಯಾಗಿದ್ದ ರಾಯ್, ಒಡಿಶಾದ ಭದ್ರಕ್ ಜಿಲ್ಲೆಯ ಸ್ಮಶಾನದ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಒಡಿಶಾ ಪೊಲೀಸರು ತಿಳಿಸಿದ್ದಾರೆ.
ಸ್ಥಳದಲ್ಲಿ ಆತನ ಲ್ಯಾಪ್‌ಟಾಪ್ ಕೂಡ ಪತ್ತೆಯಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಭದ್ರಕ್ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಕುರಿತು ಧುಸುರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಹೆಚ್ಚಿನ ಪರೀಕ್ಷೆಗಾಗಿ ಆತನ ಡೈರಿ ಮತ್ತು ಲ್ಯಾಪ್‌ಟಾಪ್ ತನಿಖಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಆರೋಪಿಯು ಬೆಂಗಳೂರಿನ ಹೆಬ್ಬಗೋಡಿ ಪ್ರದೇಶದಲ್ಲಿ ವಾಸವಾಗಿದ್ದು, ಮಲ್ಲೇಶ್ವರಂನಲ್ಲಿರುವ ಫ್ಯಾಶನ್ ಸ್ಟೋರ್‌ನಲ್ಲಿ ಕೆಲಸ ಮಾಡುತ್ತಿದ್ದ. ಅಲ್ಲಿ ಮಹಾಲಕ್ಷ್ಮಿಯ ಪರಿಚಯವಾಗಿತ್ತು. ಪರಿಚಯ ಸ್ನೇಹವಾಗಿ ಬೆಳೆದಿತ್ತು. ಆದರೆ, ಮಹಾಲಕ್ಷ್ಮಿ ಮತ್ತೊಬ್ಬರೊಂದಿಗೆ ಸಲುಗೆಯಿಂದ ಮಾತನಾಡುತ್ತಿರುವುದಕ್ಕೆ ಇಬ್ಬರ ನಡುವೆ ಮನಸ್ತಾಪವಾಗಿತ್ತು. ಇದೇ ವಿಚಾರ ಆಕೆಯ ಕೊಲೆಗೆ ಕಾರಣವಾಗಿರಬಹುದು ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ.
ಪ್ರಕರಣದ ಬಗ್ಗೆ ಪರಮೇಶ್ವರ್ ಅವರು ಬೆಂಗಳೂರನ್ನೇ ತಲ್ಲಣಗೊಳಿಸಿರುವ ವೈಯಾಲಿಕಾವಲ್‌ನಲ್ಲಿ ನಡೆದ ಮಹಿಳೆ ಮಹಾಲಕ್ಷ್ಮೀ ಹತ್ಯೆ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದೆ. ಈಗಾಗಲೇ ಆರೋಪಿ ಒಡಿಶಾದಲ್ಲಿದ್ದಾನೆಂದು ಗುರುತಿಸಲಾಗಿದೆ. ಸ್ಥಳ ಬದಲಾಯಿಸುತ್ತಿದ್ದು ತೀವ್ರ ಶೋಧ ನಡೆದಿದೆ. ಈಗಾಗಲೇ ಇಬ್ಬರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಹೆಚ್ಚಿನ ಸಾಕ್ಷ್ಯ ಮತ್ತು ಮಾಹಿತಿ ಆಧಾರದ ಮೇಲೆ ಒಡಿಶಾದಲ್ಲಿ ತಲೆಮರೆಸಿಕೊಂಡಿರುವ ವ್ಯಕ್ತಿಯ ಮೇಲೆ ಸಂಶಯವಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಂಗಳವಾರ ಬೆಳಗ್ಗೆ ಮಾಹಿತಿ ನೀಡಿದ್ದರು.
Post a comment
Log in to write reviews