ಪ್ರಧಾನಿ ಮೋದಿ ಮೈಸೂರು ಪ್ರವಾಸ ಹೊಟೆಲ್ ಬಿಲ್ ಬಾಕಿ : ಸೌಹಾರ್ದಯುತವಾಗಿ ಪರಿಹರಿಸಲು ಪ್ರಯತ್ನ: ಸಚಿವ ಖಂಡ್ರೆ

ಬೆಂಗಳೂರು: ಹುಲಿ ಯೋಜನೆ – 50ರ ಕಾರ್ಯಕ್ರಮಕ್ಕೆ ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಆತಿಥ್ಯದ ಬಿಲ್ ಬಾಕಿಯನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್.ಟಿ.ಸಿ.ಎ) ವತಿಯಿಂದ ರಾಜ್ಯದಲ್ಲಿ ಕಳೆದ ವರ್ಷ ಏಪ್ರಿಲ್‌ನಲ್ಲಿ ನಡೆದ ಕಾರ್ಯಕ್ರಮ ನಡೆದಾಗ, ವಿಧಾನಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿತ್ತು ಹೀಗಾಗಿ ರಾಜ್ಯ ಸರ್ಕಾರ ಭಾಗಿ ಆಗಿರಲಿಲ್ಲ. ರಾಜ್ಯ ಲಾಂಛನದ ಬಳಕೆಯೂ ಆಗಿರಲಿಲ್ಲ. ಇದು ಸಂಪೂರ್ಣ ಎನ್.ಟಿ.ಸಿ.ಎ. ಕಾರ್ಯಕ್ರಮವಾಗಿತ್ತು ಎಂದರು.
ದೇಶದ ಪ್ರಧಾನಿಯವರು ರಾಜ್ಯಕ್ಕೆ ಬಂದಿದ್ದ ಹಿನ್ನೆಲೆಯಲ್ಲಿ ಆತಿಥ್ಯ ನಿರ್ವಹಣೆಗಾಗಿ ಸ್ಥಳೀಯವಾಗಿ ರಚಿಸಲಾಗಿದ್ದ ಸಮಿತಿಯಲ್ಲಿ ನಮ್ಮ ಅರಣ್ಯ ಇಲಾಖೆಯ ಅಧಿಕಾರಿಗಳು ಇದ್ದರು. ವಾಸ್ತವವಾಗಿ ಈ ಕಾರ್ಯಕ್ರಮಕ್ಕೆ ಆಗುವ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ ಎನ್.ಟಿ.ಸಿ.ಎ. ಹೇಳಿತ್ತು ಎಂದು ವಿವರಿಸಿದರು.
ಕಾರ್ಯಕ್ರಮಕ್ಕೆ ಆಗಿರುವ ವೆಚ್ಚ 6 ಕೋಟಿ 33 ಲಕ್ಷ. ಈ ಪೈಕಿ 3 ಕೋಟಿ ರೂಪಾಯಿ ಬಂದಿದ್ದು, ಇನ್ನೂ 3ಕೋಟಿ 33 ಲಕ್ಷ ರೂ. ಬಾಕಿ ಬರಬೇಕಿದೆ. ಇದರಲ್ಲಿ ರಾಡಿಸನ್ ಬ್ಲೂ ಆತಿಥ್ಯವೆಚ್ಚ ಸುಮಾರು 80 ಲಕ್ಷ ರೂ. ಸೇರಿದೆ ಎಂದು ತಿಳಿಸಿದರು.
ಈ ಬಗ್ಗೆ ನಮ್ಮ ಇಲಾಖೆಯ ಅಧಿಕಾರಿಗಳು ಹಲವು ಬಾರಿ ಪತ್ರ ಬರೆದಿದ್ದರೂ, ಫೋನ್ ಮಾಡಿದ್ದರೂ ಎನ್.ಟಿ.ಸಿ.ಎ. (ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ) ಈ ಬಾಕಿ ಹಣ ನೀಡಿಲ್ಲ. ಈಗ ವಿಷಯ ತಮ್ಮ ಗಮನಕ್ಕೆ ಬಂದಿದ್ದು, ಸೌಹಾರ್ದಯುತವಾಗಿ ಪರಿಹರಿಸಲು ಪ್ರಯತ್ನಿಸುವುದಾಗಿ ಹೇಳಿದ್ದಾರೆ.
Poll (Public Option)

Post a comment
Log in to write reviews