
ಮೈಸೂರು: ರಾಜ್ಯಪಾಲರು ಸಂಪೂರ್ಣವಾಗಿ ಕೇಂದ್ರ ಸರ್ಕಾರ, ಬಿಜೆಪಿ, ಜೆಡಿಎಸ್ ಪಕ್ಷಗಳ ಕೈಗೊಂಬೆಯಾಗಿ ಕೆಲಸ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೂರಿದರು.
ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಶೋಕಾಸ್ ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ಶೋಕಾಸ್ ನೋಟಿಸ್ ಕೊಟ್ಟಿರುವುದು ಕಾನೂನು ಬಾಹಿರ. ಸಂವಿಧಾನಕ್ಕೆ ವಿರುದ್ಧ. ಕೇಂದ್ರ ಸರ್ಕಾರ ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.
ಪ್ರಾಸಿಕ್ಯೂಶನ್‌ಗೆ ಅನುಮತಿ ಕೊಟ್ಟಿರುವ ಸಂದರ್ಭದಲ್ಲಿ ಯಾವ ಬೆಳವಣಿಗೆಗಳಾಗಿವೆ ಎಂಬ ಮಾಧ್ಯಮದವರ ಪ್ರಶ್ನೆಗೆ, ಗುರುವಾರ ನಡೆದ ಸಚಿವ ಸಂಪುಟ ಸಭೆಗೆ ಹೋದರೆ ಕೆಟ್ಟ ಸಂಪ್ರದಾಯವಾಗುತ್ತದೆ ಎಂದು ಹೋಗದೇ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಸಚಿವ ಸಂಪುಟ ಸಭೆ ನಡೆಸಲು ನೇಮಿಸಲಾಗಿತ್ತು. ಶೋಕಾಸ್ ನೋಟಿಸ್ ಬಗ್ಗೆ ಸುದೀರ್ಘ ಚರ್ಚೆ ಮಾಡಿ, ನೋಟಿಸ್ ನೀಡಿರುವುದು ಕಾನೂನು ಬಾಹಿರ ಕ್ರಮ. ಅದನ್ನು ಹಿಂಪಡೆಯಬೇಕೆಂದು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಅಬ್ರಹಾಂ ಒಬ್ಬ ಬ್ಲ್ಯಾಕ್‌ಮೇಲರ್: ಕೆ.ಜೆ.ಅಬ್ರಹಾಂ ಒಬ್ಬ ಬ್ಲ್ಯಾಕ್‌ಮೇಲರ್. ಆತನ ದೂರಿನ ಮೇಲೆ ಕ್ರಮ ಕೈಗೊಂಡಿರುವುದು ಕಾನೂನುಬಾಹಿರ. ಆತ ಈ ರೀತಿ ಅನೇಕ ಜನರ ಮೇಲೆ ದೂರುಗಳನ್ನು ನೀಡಿದ್ದಾನೆ. ನಾನು ಯಾವುದೇ ಅಪರಾಧ ಮಾಡಿಲ್ಲ. ದಿನಾಂಕ 26.7.2024ರಂದು ಬೆಳಗ್ಗೆ 11.30 ಗಂಟೆಗೆ ದೂರು ನೀಡಿದ್ದು, ಅಂದೇ ರಾಜ್ಯಪಾಲರು ಶೋಕಾಸ್ ನೋಟಿಸ್ ಕೊಟ್ಟಿದ್ದಾರೆ. 136 ಜನ ಶಾಸಕರನ್ನು ಜನಾಶೀರ್ವಾದ ಮಾಡಿ ಕಳಿಸಿರುವ ಚುನಾಯಿತ ಸರ್ಕಾರದ ಮುಖ್ಯಮಂತ್ರಿಗೆ ನೋಟಿಸ್ ಕೊಡುವಾಗ ಎಲ್ಲಾ ಕಾನೂನನ್ನು ಕೂಲಂಕಷವಾಗಿ ಪರಿಶೀಲಿಸಬೇಕು. ಏನು ನೋಡದೇ ಆತುರದಲ್ಲಿ ಕೆಲಸ ಮಾಡಿದ್ದಾರೆ. ಅಂದೇ ನೋಟಿಸ್ ನೀಡಿ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರಿಗೆ ವಿಶೇಷ ಕರ್ತವ್ಯಾಧಿಕಾರಿ ಪ್ರಭು ಶಂಕರ್ ಎಂಬವರು ಕರೆ ಮಾಡಿ ಶೋಕಾಸ್ ನೋಟಿಸ್ ಸಿದ್ಧವಿದೆ, ತೆಗೆದುಕೊಳ್ಳಬೇಕು ಎಂದಿದ್ದಾರೆ. ರಾತ್ರಿಯಾಗಿರುವುದರಿಂದ ಅದನ್ನು ಪಡೆಯಲಾಗಲಿಲ್ಲ. ಮರು ದಿನ ಮಧ್ಯಾಹ್ನ 2 ಗಂಟೆಗೆ ನೋಟಿಸ್ ಆತುರವಾಗಿ ಕೊಟ್ಟಿದ್ದಾರೆ ಎಂದರು.
ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ ಅವರ ಮೇಲೆ ವಿರುದ್ಧದ ದೂರು ಇನ್ನೂ ಹಾಗೆಯೇ ಇವೆ. ಅವರಿಗೆ ಯಾಕೆ ಶೋಕಾಸ್ ನೋಟಿಸ್ ಕೊಟ್ಟಿಲ್ಲ? ಎಂದು ಪ್ರಶ್ನಿಸಿದರು.
ರಾಜ್ಯಪಾಲರಿಗೆ ಸಲಹೆ ನೀಡಬೇಕಿರುವುದು ನಮ್ಮ ಮಂತ್ರಿ ಮಂಡಲದವರು. ಮುಖ್ಯ ಕಾರ್ಯದರ್ಶಿಗಳು ವಿವರವಾದ ಪತ್ರವನ್ನು ಜುಲೈ 26ರಂದು ಸಂಜೆ 6.30 ಗಂಟೆಗೆ ರಾಜ್ಯಪಾಲರಿಗೆ ತಲುಪಿಸಿದ್ದಾರೆ. ಅದನ್ನೂ ಅವರು ನೋಡಿಲ್ಲ. ಮುಡಾ ಪ್ರಕರಣದ ಬಗ್ಗೆ ನ್ಯಾಯಾಂಗ ಆಯೋಗವನ್ನು ಜುಲೈ 14ರಂದು ಸರ್ಕಾರ ರಚಿಸಿದೆ. ಆಯೋಗದ ವರದಿಯನ್ನು ನಿರೀಕ್ಷಿಸಲಾಗಿದೆ. ತನಿಖೆ ನಡೆಸಿ ತಪ್ಪುಗಳಾಗಿದ್ದರೆ ವರದಿ ಸಲ್ಲಿಸುತ್ತಾರೆ. ಅದನ್ನೂ ಪರಿಗಣಿಸದೆ ರಾಜ್ಯಪಾಲರು ನೋಟಿಸ್ ನೀಡಿದ್ದಾರೆ ಎಂದು ವಿವರಿಸಿದರು.
ದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪಕ್ಷದ ವರಿಷ್ಠರಿಗೆ ಮುಡಾ ಕುರಿತು ಮನವರಿಕೆ ಮಾಡಿಕೊಡಲಾಗಿದೆ. ಅವರಿಗೆ ವಸ್ತುಸ್ಥಿತಿ ಅರ್ಥವಾಗಿದೆ ಎಂದು ಹೇಳಿದರು.
ರಾಜ್ಯಪಾಲರು ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಹೆದರಿದ್ದಾರೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಅಶೋಕ್ ಹೆದರಿರಬಹುದು, ನನಗೆ ಯಾಕೆ ಹೆದರಿಕೆ. ಕಾನೂನಿನ ಅಡಿ ಅವರು ನೋಟಿಸ್ ನೀಡಿಲ್ಲ. ತಪ್ಪು ಮಾಡಿದ್ದರೆ ಹೆದರಬೇಕು. ನಾನು ತಪ್ಪು ಮಾಡಿಲ್ಲ ಎಂದು ಹೇಳಿದರು.
ಕುಮಾರಸ್ವಾಮಿ ಸ್ವಇಚ್ಛೆಯಿಂದ ಪಾದಯಾತ್ರೆ ಮಾಡುತ್ತಿಲ್ಲ: ಕುಮಾರಸ್ವಾಮಿ ಕೇಂದ್ರದ ಮಂತ್ರಿ, ಜೆಡಿಎಸ್ ನಾಯಕ. ಈ ಕೇಸ್‌ನಲ್ಲಿ ಏನೂ ಇಲ್ಲ ಪಾದಯಾತ್ರೆ ಬೇಡ ಎಂದರು. ಮಳೆ ಜಾಸ್ತಿಯಾಗಿ ಪ್ರವಾಹ ಬಂದಿದೆ. ಅದರ ಕಡೆ ಗಮನ ಕೊಡಬೇಕು ಎಂದರು. ಈಗ ಪ್ರವಾಹ ಎಲ್ಲಾ ಹೋಗಿದೆಯಾ? ಕುಮಾರಸ್ವಾಮಿ ಇದನ್ನು ಸ್ವಇಚ್ಛೆಯಿಂದ ಮಾಡುತ್ತಿಲ್ಲ. ಇದನ್ನೆಲ್ಲಾ ನಾವು ಎದುರಿಸಲು ಸಿದ್ಧರಿದ್ದೇವೆ ಎಂದರು.
Poll (Public Option)

Post a comment
Log in to write reviews