ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂಪಾಯಿಗಳ ಭ್ರಷ್ಟಾಚಾರ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಚಿವ ನಾಗೇಂದ್ರ ರಾಜೀನಾಮೆ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣ ರಾಜ್ಯಾದ್ಯಂತ ತೀವ್ರ ಟೀಕೆಗೆ ಗುರಿಯಾಗಿದ್ದು, ಕಾಂಗ್ರೆಸ್ ಸರ್ಕಾರವನ್ನು ಸಂಕಷ್ಟಕ್ಕೆ ತಂದೊಡ್ಡಿದೆ. ತೆಲಂಗಾಣ ವಿಧಾನಸಭಾ ಚುನಾವಣೆಗೆ ಈ ಹಣ ಬಳಕೆಯಾಗಿದೆ ಎಂಬ ಆರೋಪವೂ ಕೇಳಿ ಬಂದಿದೆ. ಈ ಸಂಬಂಧ ಹೈಕಮಾಂಡ್ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್ ಚರ್ಚೆ ನಡೆಸಿದ್ದು, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾಗಿರುವ ನಾಗೇಂದ್ರ ಅವರಿಗೆ ಪ್ರಕರಣದ ತನಿಖೆ ಮುಗಿಯುವರೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ರಾಜ್ಯ ಸರ್ಕಾರ ಸೂಚಿಸಿದೆ ಎನ್ನಲಾಗಿದೆ.
ಇನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಸಿಬಿಐ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದೆ. ಹೀಗಾಗಿ ನಾಗೇಂದ್ರ ಅವರು ಸಚಿವ ಸ್ಥಾನದಲ್ಲಿ ಮುಂದುವರೆಯುವುದು ಉತ್ತಮವಲ್ಲ ಎಂಬ ಅಭಿಪ್ರಾಯ ಪಕ್ಷದೊಳಗೆ ಕೇಳಿ ಬಂದಿದೆ. ರಾಜೀನಾಮೆ ನೀಡದಿದ್ದರೆ, ಪಕ್ಷಕ್ಕೆ ಮುಜುಗರವಾಗಲಿದೆ. ಹೀಗಾಗಿ ರಾಜೀನಾಮೆ ಕೊಡುವಂತೆ ಸೂಚನೆ ನೀಡಲಾಗಿದೆ. ಸಚಿವ ನಾಗೇಂದ್ರ ಅವರೊಂದಿಗೆ ಚರ್ಚೆ ನಡೆಸಿರುವ ಸಿಎಂ ಸಿದ್ದರಾಮಯ್ಯ ಅವರು, ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಿದರೆ ಬೇರೆ ಸಂದೇಶ ರವಾನೆಯಾಗುತ್ತದೆ. ಹೀಗಾಗಿ ರಾಜೀನಾಮೆ ನೀಡುವುದು ಸೂಕ್ತ ಎಂಬ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
Post a comment
Log in to write reviews