ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿಯ ಹಗರಣ :ಯಾವುದೇ ತನಿಖೆಗೂ ಸಿದ್ದ: ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿಯ ಸಾಕ್ಷ್ಯಾ ನಾಶಗಳ ಕುರಿತಾಗಿ ನಾನು ಯಾವುದಾದರೂ ವ್ಯಕ್ತಿಗಳ ಜೊತೆ ಸಭೆ ನಡೆಸಿದ್ದರೆ ನ್ಯಾಯಸಮ್ಮತ ತನಿಖೆಗೆ ಸಿದ್ಧನಿದ್ದೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಸವಾಲು ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ 24ರಂದು ಬೆಂಗಳೂರಿನ ವಿಕಾಸಸೌಧದ ನನ್ನ ಕಚೇರಿಯಲ್ಲಿ ನಾನು, ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿಯ ಅಧ್ಯಕ್ಷ ಬಸವರಾಜ್ ದದ್ದಲ್ ಸೇರಿದಂತೆ ಕೆಲವರು ಸಭೆ ನಡೆಸಿ ಸಾಕ್ಷ್ಯಾ ನಾಶ ಮಾಡಿದ್ದೇನೆ ಎಂಬ ಆರೋಪ ನನ್ನ ಮೇಲೆ ಕೇಳಿಬಂದಿದೆ. ವಾಸ್ತವವಾಗಿ ಮೇ 24ರಂದು ಲೋಕಸಭಾ ಕ್ಷೇತ್ರದ ಹಿನ್ನೆಲೆ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ನಾನು ಕಚೇರಿಗೆ ಭೇಟಿ ನೀಡಿರಲಿಲ್ಲ. ಆದರೂ ನಾನು ಕಚೇರಿಯಲ್ಲಿ ಇದ್ದೆ ಎಂದರೆ, ಇದಕ್ಕಿಂತ ಅಪಹಾಸ್ಯ ಇನ್ನೇನಿದೆ. ಯಾವುದೇ ತನಿಖೆ ಮಾಡಿದರೂ ನಾನು ಕಾನೂನುಬದ್ದ ಎದುರಿಸಲು ಸಿದ್ದನಿದ್ದೇನೆ ಎಂದರು.
ಎಸ್‍ಐಟಿ ವಶದಲ್ಲಿರುವ ವ್ಯಕ್ತಿಯ ಮುಖವನ್ನೇ ನಾನು ನೋಡಿಲ್ಲ. ನನಗೂ, ಅವರಿಗೂ ಯಾವುದೇ ಸಂಬಂಧವೂ ಇಲ್ಲ. ಎಸ್‍ಐಟಿ ಅಧಿಕಾರಿಗಳ ಮುಂದೆ ಆತ ಏನು ಹೇಳಿದ್ದಾನೆ ಎಂಬುದೂ ನನಗೂ ಗೊತ್ತಿಲ್ಲ. ಈ ಊಹಾಪೋಹಗಳಿಗೆ ನಾನೇಕೆ ಉತ್ತರ ಕೊಡಲಿ. ನಾನು ನನ್ನ ಕಚೇರಿಯಲ್ಲಿ ಸಭೆ ನಡೆಸಿದ್ದರೆ ಸಿಸಿಟಿವಿಯ ಪೂಟೇಜ್‍ಗಳನ್ನು ತೆಗೆದು ಪರಿಶೀಲಿಸಲಿ. ಈ ಕುರಿತು ಸರ್ಕಾರ ತನಿಖೆ ನಡೆಸಿದರೂ ನನ್ನ ಅಭ್ಯಂತರವಿಲ್ಲ. ತನಿಖೆಯಲ್ಲಿ ಸತ್ಯಸತ್ಯತೆ ಹೊರಬರಲಿದೆ. ಯಾರೇ ತಪ್ಪೇ ಮಾಡಿದರೂ ಕಾನೂನು ಪ್ರಕಾರ ಶಿಕ್ಷೆಯಾಗುತ್ತದೆ ಎಂದರು.
ಇನ್ನು ಪ್ರತಿ ಪಕ್ಷ ಬಿಜೆಪಿ ನನ್ನ ರಾಜೀನಾಮೆ ಕೇಳುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು,ಯಾವ ಆಧಾರದ ಮೇಲೆ ಅವರು ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ ಎಂಬುದೇ ತಿಳಿಯುತ್ತಿಲ್ಲ. ಪ್ರಕರಣಕ್ಕೂ ನನಗೂ ಸಂಬಂಧವೇ ಇಲ್ಲ ಎಂದ ಮೇಲೆ ರಾಜೀನಾಮೆ ನೀಡುವ ಔಚಿತ್ಯವಾದರೂ ಏನು ಎಂದು ಶರಣಪ್ರಕಾಶ್ ಪಾಟೀಲ್ ಮರು ಪ್ರಶ್ನೆ ಹಾಕಿದರು.
Poll (Public Option)

Post a comment
Log in to write reviews