ಉಡುಪಿ: ರಾಜ್ಯದಲ್ಲಿ ಮುಂಗಾರು ಮಳೆಯ ಆಗಮನವಾಗಿದೆ, ಮಳೆಯಿಂದಾಗಿ ಆಗಬಹುದಾದಂತಹ ಅನಾಹುತಗಳ ಬಗ್ಗೆ ಮುಂಜಾಗರೂಕತೆ ಇರಲಿ. ಅಲ್ಲದೆ ನೆರೆ ಸೇರಿದಂತೆ ಮತ್ತಿತರ ಅವಘಡಗಳಿಂದ ಜನ ಜಾನುವಾರುಗಳಿಗೆ ಸಾವು ನೋವುಗಳು ಆಗದಂತೆ ಹಾಗೂ ಆಸ್ತಿ ಹಾನಿ ಆಗದಂತೆ ಅಗತ್ಯವಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದ್ದಾರೆ.
ಉಡುಪಿಯ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಈ ಭಾರಿ ಹವಾಮಾನ ಇಲಾಖೆ, ಉಡುಪಿ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದ್ದಾರೆ. ಈಗಾಗಲೇ ಜಿಲ್ಲೆಯಲ್ಲಿ ಸಿಡಿಲು ಬಡಿತದಿಂದ ಮೂರು ಜನರು ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಈ ತರಹದ ಹಾನಿಗಳಿಗೆ ಮುಂಜಾಗರೂಕತೆ ವಹಿಸಿ ಹಾಗೂ ಮಳೆಯಿಂದ ಹಾನಿಗೊಳಗಾದವರಿಗೆ ಬೇಗ ಪರಿಹಾರ ಒದಗಿಸಬೇಕು ಎಂದು ಸಂಭಂದ ಪಟ್ಟ ಅಧಿಕಾರಿಗಳಿಗೆ ಆದೇಶಿಸಿದರು.
ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಮಳೆ ನೀರು ಸರಾಗವಾಗಿ ಹರಿಯುವಂತೆ ಸರಿಯಾದ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಸ್ಥಳೀಯ ಸಂಸ್ಥೆಗಳು ಕೈಗೊಂಡಿರುವ ಕಾಮಗಾರಿಗಳನ್ನ ಸರಿಯಾಗಿ ಪರಿಶೀಲನೆ ಮಾಡಲು ಸಿಇಒ ಸೂಚನೆ ನೀಡಿದರು. ಕಳೆದಬಾರಿ ಉಡುಪಿ ನಗರ ಪ್ರದೇಶದಲ್ಲಿ ಮಳೆ ನೀರು ಸರಾಗವಾಗಿ ಹರಿಯದ ಅನೇಕ ಸಮಸ್ಯೆಗಳು ಉಂಟಾದ್ದವು. ಈ ಬಾರಿ ಅಂತಹ ಅನಾಹುತ ಆಗದಂತೆ ಎಚ್ಚರಿಕೆ ವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ರಸ್ತೆ ಬದಿಯಲ್ಲಿರುವ ಅಪಾಯಕಾರಿ ಮರಗಳನ್ನು ತೆರವುಗೊಳಿಸುವ ಕಾರ್ಯವನ್ನು ಆದಷ್ಟು ಬೇಗ ಆದ್ಯತೆ ಮೇಲೆ ಕೈಗೊಳ್ಳಬೇಕು. ಕುಡಿಯುವ ನೀರಿಗೆ ಮಳೆ ನೀರು ಹಾಗೂ ಕಲುಷಿತ ನೀರು ಮಿಶ್ರಣ ಗೊಳ್ಳದಂತೆ ಕ್ರಮವಹಿಸಿ. ಆರೋಗ್ಯ ಇಲಾಖೆಯ ಅಧಿಕಾರಿಗಳು ಆಗಿಂದಾಗ ನೀರಿನ ಗುಣಮಟ್ಟ ಪರೀಕ್ಷೆ ನಡೆಸಬೇಕು ಎಂದು ಲಕ್ಷ್ಮೀ ಹೆಬ್ಬಾಳಕರ್ ಖಡಕ್ ಸೂಚನೆ ನೀಡಿದ್ದಾರೆ.
ಗ್ರಾಮೀಣ ಭಾಗದ ಜನರು ಹಳ್ಳ ದಾಟಲು ಕಾಲುಸಂಕಗಳನ್ನು ಹೆಚ್ಚಾಗಿ ಬಳಕೆ ಮಾಡುತ್ತಾರೆ. ಆದ್ಯತೆ ಮೇರೆಗೆ ಕಾಲು ಸಂಕಗಳನ್ನು ಶೀಘ್ರವೇ ನಿರ್ಮಿಸಬೇಕು. ಈ ಬಾರಿ ಜಿಲ್ಲೆಯಲ್ಲಿ 35,509 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲು ಗುರಿ ಹೊಂದಲಾಗಿದೆ. ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಅಗತ್ಯ ಇರುವ ಬಿತ್ತನೆ ಬೀಜಗಳನ್ನು ರಸಗೊಬ್ಬರ, ದಾಸ್ತಾನುಗಳನ್ನು ಇಟ್ಟುಕೊಂಡು, ರೈತರಿಗೆ ಸಮರ್ಪಕವಾಗಿ ವಿತರಿಸಲು ಸಚಿವರು ಕೃಷಿ ಇಲಾಖೆಯ ಅಧಿಕಾರಿಗಳಿಗೂ ಸೂಚನೆ ನೀಡಿದರು.
Post a comment
Log in to write reviews