2024-11-08 10:48:13

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮೈತ್ರಿ ಪಕ್ಷದ ಅಭ್ಯರ್ಥಿ ಆಗದಿದ್ದರೆ ಸ್ವತಂತ್ರವಾಗಿ ಸ್ಪರ್ಧಿಸುವೆ ಎಂದ ಯೋಗೇಶ್ವರ್

ಬೆಂಗಳೂರು: ಚನ್ನಪಟ್ಟಣದಲ್ಲಿ ನಡೆಯುವ ಉಪಚುನಾವಣೆಯಲ್ಲಿ (Channaptna By Election) ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ (CP Yogeshwar) ಸಿದ್ಧತೆ ನಡೆಸುತ್ತಿದ್ದಾರೆ. ಆದರೆ ಈ ಬಗ್ಗೆ ಇನ್ನೂ ಅಂತಿಮ ತೀರ್ಮಾನವಾಗದ ಹಿನ್ನಲೆಯಲ್ಲಿ ಅವರು ವರಿಷ್ಠರನ್ನು ಭೇಟಿಯಾಗಲು ಸೋಮವಾರ ದಿಲ್ಲಿಗೆ ತೆರಳಿದ್ದಾರೆ. ಒಂದುವೇಳೆ ಮೈತ್ರಿ ಅಭ್ಯರ್ಥಿ ಆಗದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.

ದಿಲ್ಲಿಗೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಮಾತನಾಡಿದ ಅವರು, ʼʼನಾನು ಚನ್ನಪಟ್ಟಣ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಅಲ್ಲಿ ಸ್ಪರ್ಧಿಸುವಂತೆ ಜನರು ಕೂಡ ಒತ್ತಡ ಹಾಕುತ್ತಿದ್ದಾರೆ. ನಾವೆಲ್ಲರೂ ಸಮಾನ ಮನಸ್ಕರು ಸಭೆ ಸೇರಿದ್ದೇವೆ. ಯಾವುದೇ ಕಾರಣಕ್ಕೂ ಚನ್ನಪಟ್ಟಣ ಕ್ಷೇತ್ರವನ್ನು ಕಾಂಗ್ರೆಸ್‌ಗೆ ಬಿಟ್ಟು ಕೊಡಬಾರದು. ಆ ಕ್ಷೇತ್ರವನ್ನು ಎನ್‌ಡಿಎ ವಶಕ್ಕೆ ತಗೊಳ್ಳಬೇಕು ಎಂದು ನಿರ್ಣಯಿಸಿದ್ದೇವೆʼʼ ಎಂದು ಅವರು ತಿಳಿಸಿದ್ದಾರೆ.

ʼʼಇದೇ ಕಾರಣಕ್ಕೆ ನಾನು ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಮನಸ್ಸು ಮಾಡಿದ್ದೇನೆ. ಅದಕ್ಕಾಗಿ ಇಂದು ದಿಲ್ಲಿಗೆ ತೆರಳುತ್ತಿದ್ದೇನೆ. ಅಲ್ಲಿ ವರಿಷ್ಠರನ್ನು ಭೇಟಿಯಾಗಿ ಚರ್ಚೆ ನಡೆಸುತ್ತೇನೆ. ಆಗಸ್ಟ್ 16ರಂದು ಮತ್ತೆ ದಿಲ್ಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗುವ ಯೋಜನೆಯೂ ಇದೆʼʼ ಎಂದು ಯೋಗೇಶ್ವರ್ ವಿವರಿಸಿದ್ದಾರೆ.

ʼʼಈಗಾಗಲೇ ನಮ್ಮ ರಾಜ್ಯ ನಾಯಕರು ಕೂಡ ನನ್ನ ಸ್ಪರ್ಧೆಯ ಬಗ್ಗೆ ಭರವಸೆ ನೀಡಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಸ್ವಲ್ಪ ಮುಂಗೋಪ ಅಷ್ಟೇ. ಆದರೆ ಅಂತಿಮವಾಗಿ ಅವರ ಜತೆ ವರಿಷ್ಠರು ಮಾತಾಡಿದ ಬಳಿಕ ನನ್ನ ಸ್ಪರ್ಧೆಗೆ ಅವರೂ ಒಪ್ಪಿಗೆ ಸೂಚಿಸುವ ಭರವಸೆ ಇದೆ. ಕಳೆದ ಬಾರಿ ಮೈತ್ರಿ ಮಾಡಿಕೊಳ್ಳುವಂತೆ ಹೇಳಿದವನೇ ನಾನು. ಬಿಜೆಪಿ ಮೈತ್ರಿ ಮಾಡಿಕೊಳ್ಳದಿದ್ದರೆ ನಮ್ಮ ಭಾಗದಲ್ಲಿ ಜೆಡಿಎಸ್ ಕಥೆ ಏನಾಗುತ್ತಿತ್ತು? ಹೀಗಾಗಿ ಎರಡು ಪಕ್ಷಗಳ ಒಮ್ಮತದ ಅಭ್ಯರ್ಥಿ ನಾನೇ ಆಗುವ ವಿಶ್ವಾಸ ಇದೆʼʼ ಎಂದು ಅವರು ತಿಳಿಸಿದ್ದಾರೆ.

ಸ್ವತಂತ್ರ ಸ್ಪರ್ಧೆ

ಇದೇ ವೇಳೆ ಅವರು ಮೈತ್ರಿ ಪಕ್ಷದಿಂದ ಟಿಕೆಟ್‌ ಸಿಗದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಇಂಗಿತವನ್ನೂ ವ್ಯಕ್ತಪಡಿಸಿದ್ದಾರೆ. ʼʼಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯಬೇಕು ಎನ್ನುವ ಆಸೆ ಇದೆ. ಒಂದುವೇಳೆ ಅದು ಸಾಧ್ಯ ವಾಗಿಲ್ಲ ಅಂದರೆ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಈಗಾಗಲೇ ನಮ್ಮ ಕ್ಷೇತ್ರದ ಜನರು ಹಲವು ಬಾರಿ ಸ್ವತಂತ್ರವಾಗಿ ನಿಂತರೂ ನನ್ನನ್ನು ಗೆಲ್ಲಿಸಿದ್ದಾರೆ. ಮೈತ್ರಿ ಅಭ್ಯರ್ಥಿಯಾಗಲು ಸಾಧ್ಯವಿಲ್ಲ ಎಂದಾದರೆ ಸ್ವತಂತ್ರವಾಗಿ ಸ್ಪರ್ಧಿಸುತ್ತೇನೆ ಹೊರತು ಕಾಂಗ್ರೆಸ್‌ಗೆ ಸೇರಲ್ಲ. ಇದುವರೆಗೆ ನನ್ನನ್ನು ಯಾವುದೇ ಕಾಂಗ್ರೆಸ್ ನಾಯಕರು ಸಂಪರ್ಕಿಸಿಲ್ಲʼʼ ಎಂದು ಯೋಗೇಶ್ವರ್‌ ಸ್ಪಷ್ಟಪಡಿಸಿದ್ದಾರೆ.

ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿದ್ದ ಅವರು, ʼʼಕಳೆದ ವಾರ ನಾನು ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದೆ. ಈಗಾಗಲೇ ಕಾಂಗ್ರೆಸ್ ಚುನಾವಣೆಗೆ ತಯಾರಿ ಮಾಡಿಕೊಳ್ಳುತ್ತಿದೆ. ಹೀಗಾಗಿ ಆದಷ್ಟು ಬೇಗ ಮೈತ್ರಿ ಅಭ್ಯರ್ಥಿ ಆಯ್ಕೆ ಮಾಡಿ ಹೆಸರು ಸೂಚಿಸಿ ಎಂದು ಹೇಳಿದೆ. ಎಚ್‌ಡಿಕೆ ಅವರು ನನ್ನನ್ನೇ ನಿಲ್ಲುವಂತೆ ಹೇಳಿದ್ದಾರೆ. ಅದಕ್ಕೆ ಅಧಿಕೃತ ಅನುಮೋದನೆ ಅವರೇ ಕೊಡಬೇಕು. ಮೈತ್ರಿ ಪಕ್ಷದ ವರಿಷ್ಠರು ಅಧಿಕೃತ ಘೋಷಣೆ ಮಾಡಬೇಕು. ಹಾಗಾಗಿ ನೀವೇ ಬಂದು ಹೆಸರು ಘೋಷಣೆ ಮಾಡಿ ಎಂದು ಅವರನ್ನೇ ಕೇಳಿದ್ದೇನೆʼʼ ಎಂದು ಹೇಳಿದ್ದರು.

Post a comment

No Reviews